ಜೆಡಿಎಸ್ ಚಿಕ್ಕಬಳ್ಳಾಪುರ ಜಿಲ್ಲಾ ಸಾಮಾಜಿಕ ಜಾಲತಾಣ ವಿಭಾಗದ ಜಿಲ್ಲಾಧ್ಯಕ್ಷರಾಗಿ ಅಕಿಲ್ ರೆಡ್ಡಿ ಮರು ಆಯ್ಕೆ

ಚಿಕ್ಕಬಳ್ಳಾಪುರ: ಬೆಂಗಳೂರಿನ ಜೆಪಿ ಭವನದಲ್ಲಿ ಇಂದು ನಡೆದ ಕರ್ನಾಟಕ ಪ್ರದೇಶ ಜಾತ್ಯತೀತ ಜನತಾದಳ (ಜೆಡಿಎಸ್) ಪಕ್ಷದ ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯ ಪದಾಧಿಕಾರಿಗಳು ಹಾಗೂ ಜಿಲ್ಲಾಧ್ಯಕ್ಷರ ಆಯ್ಕೆ ಸಂದರ್ಭದಲ್ಲಿ, ಚಿಕ್ಕಬಳ್ಳಾಪುರ ಜಿಲ್ಲಾ ಸಾಮಾಜಿಕ ಜಾಲತಾಣ ವಿಭಾಗದ ಜಿಲ್ಲಾಧ್ಯಕ್ಷರಾಗಿ ಅಕಿಲ್ ರೆಡ್ಡಿ, ಜೀಡಮಾಕಲಹಳ್ಳಿ ಅವರನ್ನು ಮತ್ತೊಮ್ಮೆ ಮರು ಆಯ್ಕೆ ಮಾಡಲಾಗಿದೆ. ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷದ ಮೇಲಿನ ಅಭಿಮಾನ, ನಾಯಕರ ಮೇಲಿನ ನಿಷ್ಠೆ ಹಾಗೂ ಸಂಘಟನೆಗಾಗಿ ಸಲ್ಲಿಸುತ್ತಿರುವ ಸೇವೆಯನ್ನು ಗುರುತಿಸಿ ಮತ್ತೊಮ್ಮೆ ಮಹತ್ತರ ಜವಾಬ್ದಾರಿ ನೀಡಿರುವುದಕ್ಕೆ ಅಕಿಲ್ ರೆಡ್ಡಿ ಅವರು ಪಕ್ಷದ ವರಿಷ್ಠರಾದ ಹೆಚ್.ಡಿ. ದೇವೇಗೌಡರು, ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ರಾಜ್ಯ ಯುವನಾಯಕ ನಿಖಿಲ್ ಕುಮಾರಸ್ವಾಮಿ, ಜೆಡಿಎಸ್ ಕೋರ್ ಕಮಿಟಿ ರಾಜ್ಯಾಧ್ಯಕ್ಷ ಜೆ.ಕೆ. ಕೃಷ್ಣಾರೆಡ್ಡಿ, ಮಹಿಳಾ ರಾಜ್ಯಾಧ್ಯಕ್ಷೆ ರಶ್ಮಿ ರಾಮೇಗೌಡ, ಚಿಕ್ಕಬಳ್ಳಾಪುರ ಜಿಲ್ಲಾಧ್ಯಕ್ಷ ಮುನಿಯಪ್ಪ, ತಿಪ್ಪೇಸ್ವಾಮಿ, ರಮೇಶ್ ಗೌಡ ಹಾಗೂ ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯಾಧ್ಯಕ್ಷ ಚಂದನ್ ಗೌಡ ಸೇರಿದಂತೆ ಪಕ್ಷದ ಹಿರಿಯ ನಾಯಕರು ಹಾಗೂ ಮುಖಂಡರಿಗೆ ಹೃದಯಪೂರ್ವಕ ಕೃತಜ್ಞತೆ ಸಲ್ಲಿಸಿದ್ದಾರೆ. “ಪದವಿ ಸಿಕ್ಕಿರುವುದಕ್ಕೆ ಹೆಮ್ಮೆಪಡುವುದಕ್ಕಿಂತ, ಪಕ್ಷದ ಸೇವೆ ಮಾಡಲು ಮತ್ತೊಮ್ಮೆ ಅವಕಾಶ ಸಿಕ್ಕಿರುವುದೇ ನನ್ನ ಹೆಮ್ಮೆ” ಎಂದು ಅಕಿಲ್ ರೆಡ್ಡಿ ತಿಳಿಸಿದ್ದಾರೆ.

ಮೂರನೇ ಶ್ರಾವಣ ಶನಿವಾರ: ನವಧಾನ್ಯ ಅಲಂಕಾರದಲ್ಲಿ ಕಂಗೊಳಿಸಿದ ಕುರುಟಹಳ್ಳಿ ವೀರಾಂಜನೇಯ

ಚಿಂತಾಮಣಿ: ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕುರುಟಹಳ್ಳಿ ಗ್ರಾಮದಲ್ಲಿ ನೆಲೆಸಿರುವ ಪ್ರಸಿದ್ಧ ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಮೂರನೇ ಶ್ರಾವಣ ಶನಿವಾರದ ಅಂಗವಾಗಿ ವಿಶೇಷ ಪೂಜೆ ಹಾಗೂ ನವಧಾನ್ಯ ಅಲಂಕಾರ ನೆರವೇರಿಸಲಾಯಿತು. ಅರ್ಚಕರಾದ ಶ್ರೀರಾಮಚಂದ್ರ ಸ್ವಾಮಿ ಅವರ ನೇತೃತ್ವದಲ್ಲಿ ಶ್ರೀ ವೀರಾಂಜನೇಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ, ವಿವಿಧ ನವಧಾನ್ಯಗಳಿಂದ ಸುಂದರವಾಗಿ ಅಲಂಕಾರ ಮಾಡಲಾಯಿತು. ವಿಶೇಷ ಅಲಂಕಾರವು ಭಕ್ತರ ಗಮನ ಸೆಳೆಯಿತು.ಶ್ರಾವಣ ಶನಿವಾರದ ಪ್ರಯುಕ್ತ ದೇವಾಲಯಕ್ಕೆ ಆಗಮಿಸಿದ ಭಕ್ತರು ಸ್ವಾಮಿಯ ದರ್ಶನ ಪಡೆದು, ವಿಶೇಷ ಪೂಜೆಯಲ್ಲಿ ಪಾಲ್ಗೊಂಡು ಆಶೀರ್ವಾದ ಪಡೆದರು. ಸರ್ವರಿಗೂ ಶ್ರೀ ಹನುಮಂತನ ಆಶೀರ್ವಾದ ಸದಾ ಇರಲಿ ಎಂದು ಭಕ್ತರು ಪ್ರಾರ್ಥಿಸಿದರು.

error: Content is protected !!